IPL 2025: 35 ಎಸೆತಗಳಲ್ಲಿ ಶತಕ..! ಟಿ20 ಕ್ರಿಕೆಟ್ನಲ್ಲಿ ಕ್ರೀಡಾ ಜಗತ್ತೇ ಬೆರಗುಗೊಳಿಸುವಂತೆ ಇತಿಹಾಸ ಬರೆದ 14 ವರ್ಷದ ಹುಡುಗ ವೈಭವ್ ಸೂರ್ಯವಂಶಿ


ಜೈಪುರ: ರಾಜಸ್ಥಾನದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ರಾಜಸ್ಥಾನ್ ಹಾಗೂ ಗುಜರಾತ್ ನಡುವಿನ ಐಪಿಎಲ್ ಪಂದ್ಯದಲ್ಲಿ ರಾಜಸ್ಥಾನ್ ತಂಡದ ಆರಂಭಿಕ ಬ್ಯಾಟ್ಸ್‌ಮನ್ ವೈಭವ್ ಸೂರ್ಯವಂಶಿ ಕೇವಲ 35 ಎಸೆತಗಳಲ್ಲಿ ಶತಕ ಸಿಡಿಸಿ ಟಿ20 ಕ್ರಿಕೆಟ್ನಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ.

7 ಬೌಂಡರಿ ಹಾಗೂ 11 ಸಿಕ್ಸರ್ ಸಹಿತ 100 ರನ್ ಪೂರೈಸಿದ ವೈಭವ್, ಐಪಿಎಲ್ ಇತಿಹಾಸದಲ್ಲಿ ಎರಡನೇ ಅತಿ ವೇಗದ ಶತಕ ಸಿಡಿಸಿದ ಆಟಗಾರ ಎನಿಸಿಕೊಂಡರು. ಇದು ಮಾತ್ರವಲ್ಲದೆ ಐಪಿಎಲ್ ಹಾಗೂ ಟಿ20 ಕ್ರಿಕೆಟ್​ನಲ್ಲಿ ಅತಿ ವೇಗದ ಶತಕ ಸಿಡಿಸಿದ ಅತ್ಯಂತ ಕಿರಿಯ ಆಟಗಾರ ಎಂಬ ವಿಶ್ವ ದಾಖಲೆಗೂ ವೈಭವ್ ಕೊರಳೊಡ್ಡಿದರು. ಇಷ್ಟೇ ಅಲ್ಲ ಕೇವಲ 14 ವರ್ಷ 32 ದಿನಗಳ ವಯಸ್ಸಿನಲ್ಲಿ ಈ ಐತಿಹಾಸಿಕ ಇನ್ನಿಂಗ್ಸ್ ಆಡಿದ ವೈಭವ್ ಕ್ರಿಕೆಟ್ ಇತಿಹಾಸದಲ್ಲಿ ಯಾವುದೇ ಸ್ವರೂಪದಲ್ಲಿ ಶತಕ ಸಿಡಿಸಿದ ಅತ್ಯಂತ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

ವೈಭವ್ ಐತಿಹಾಸಿಕ ಶತಕ

ಗುಜರಾತ್ ಟೈಟನ್ಸ್ ವಿರುದ್ಧ ಕೇವಲ 38 ಎಸೆತಗಳಲ್ಲಿ 101 ರನ್ ಬಾರಿಸಿದ ವೈಭವ್ ಸೂರ್ಯವಂಶಿ 265.78 ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಬೀಸಿ 7 ಬೌಂಡರಿ ಮತ್ತು 11 ಸಿಕ್ಸರ್‌ಗಳನ್ನು ಬಾರಿಸಿದರು. ಮೇಲೆ ಹೇಳಿದಂತೆ ಕೇವಲ 35 ಎಸೆತಗಳಲ್ಲಿ ಶತಕ ಪೂರೈಸಿದ ವೈಭವ್, ಇದರೊಂದಿಗೆ ಐಪಿಎಲ್‌ನಲ್ಲಿ ಅತಿ ವೇಗದ ಶತಕ ಸಿಡಿಸಿದ ಭಾರತೀಯ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಇದಕ್ಕೂ ಮೊದಲು ಈ ದಾಖಲೆ ಯೂಸುಫ್ ಪಠಾಣ್ ಹೆಸರಿನಲ್ಲಿತ್ತು. ಅವರು 2010 ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆಡುವಾಗ ಈ ಶತಕ ಬಾರಿಸಿದ್ದರು. ಇದೀಗ 15 ವರ್ಷಗಳ ನಂತರ ಅದೇ ರಾಜಸ್ಥಾನ್ ಪರ ಆಡುತ್ತಿರುವ ವೈಭವ್ ಸೂರ್ಯವಂಶಿ ಅವರನ್ನು ಹಿಂದಿಕ್ಕಿದ್ದಾರೆ.

ಅಧಿಕ ಸಿಕ್ಸರ್ ದಾಖಲೆ ಸರಿಗಟ್ಟಿದ ವೈಭವ್

ಇನ್ನು ವೈಭವ್ ಸೂರ್ಯವಂಶಿಗಿಂತ ಮೊದಲು ಐಪಿಎಲ್‌ನಲ್ಲಿ ಶತಕ ಗಳಿಸಿದ ಅತ್ಯಂತ ಕಿರಿಯ ಬ್ಯಾಟ್ಸ್‌ಮನ್ ಬಗ್ಗೆ ಮಾತನಾಡಿದರೆ, ಈ ದಾಖಲೆ ಮನೀಶ್ ಪಾಂಡೆ ಹೆಸರಿನಲ್ಲಿತ್ತು. ಮನೀಶ್ ಪಾಂಡೆ 19 ವರ್ಷ 253 ದಿನಗಳಲ್ಲಿ ಈ ಸಾಧನೆ ಮಾಡಿದ್ದರು. ಆದರೆ ಈಗ ಈ ದಾಖಲೆ ವೈಭವ್ ಸೂರ್ಯವಂಶಿ ಪಾಲಾಗಿದೆ. ಇಷ್ಟೇ ಅಲ್ಲ, ವೈಭವ್ ಸೂರ್ಯವಂಶಿ ಐಪಿಎಲ್ ಇನ್ನಿಂಗ್ಸ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಭಾರತೀಯ ಬ್ಯಾಟ್ಸ್‌ಮನ್ ದಾಖಲೆಯನ್ನು ಸರಿಗಟ್ಟಿದ್ದಾರೆ. ಇದಕ್ಕೂ ಮೊದಲು, ಮುರಳಿ ವಿಜಯ್ 2010 ರ ಐಪಿಎಲ್‌ನಲ್ಲಿ ಇನ್ನಿಂಗ್ಸ್‌ನಲ್ಲಿ 11 ಸಿಕ್ಸರ್‌ಗಳನ್ನು ಬಾರಿಸಿದ್ದರು.

Next Post Previous Post

Announcement